ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ತಿಂಗಳಾಂತ್ಯದವರೆಗೆ ಮುಂದುವರಿದ ನೈಟ್ ವೀಕೆಂಡ್ ಕರ್ಫ್ಯೂ ಕೊರೊನ ಹೆಚ್ಚಳ ಹಿನ್ನೆಲೆ ಸರ್ಕಾರದಿಂದ ಮತ್ತಷ್ಟು ಕಠಿಣ ಮಾರ್ಗಸೂಚಿ ಬಿಡುಗಡೆ.

ತಿಂಗಳಾಂತ್ಯದವರೆಗೆ ಮುಂದುವರಿದ ನೈಟ್ ವೀಕೆಂಡ್ ಕರ್ಫ್ಯೂ ಕೊರೊನ ಹೆಚ್ಚಳ ಹಿನ್ನೆಲೆ ಸರ್ಕಾರದಿಂದ ಮತ್ತಷ್ಟು ಕಠಿಣ ಮಾರ್ಗಸೂಚಿ ಬಿಡುಗಡೆ.

 

 

 

ಬೆಂಗಳೂರು: ರಾಜ್ಯದಲ್ಲಿ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಸೇರಿದಂತೆ ಕಠಿಣ ಮಾರ್ಗಸೂಚಿ ಜ 19 ರವರೆಗೆ ಜಾರಿಯಲ್ಲಿದ್ದು, ಅದನ್ನು ತಿಂಗಳಾಂತ್ಯದವರೆಗೂ ವಿಸ್ತರಿಸುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ.

ರಾಜ್ಯದ ಕೋವಿಡ್ ಸ್ಥಿತಿಗತಿ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಅಧಿಕಾರಿಗಳು ಹಾಗು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಜೊತೆ ಸಭೆ ನಡೆಸಿದರು. ಈ ವೇಳೆ, ಸದ್ಯ ರಾಜ್ಯದಲ್ಲಿ ಕೈಗೊಂಡಿರುವ ಕಠಿಣ ನಿರ್ಬಂಧಗಳನ್ನು ಮತ್ತೆ ಎರಡು ವಾರ ವಿಸ್ತರಣೆ ಮಾಡುವ ಕುರಿತು ಸಮಾಲೋಚನೆ ನಡೆಸಲಾಯಿತು. ಕೆಲವೊಂದು ಹೆಚ್ಚುವರಿ ನಿರ್ಬಂಧ ಸೇರಿಸಿ ಮಾರ್ಗಸೂಚಿಯನ್ನು ಜನವರಿ ಅಂತ್ಯದವರೆಗೂ ವಿಸ್ತರಣೆ ಮಾಡುವ ಮಹತ್ವದ ನಿರ್ಧಾರವನ್ನು ಸಭೆಯಲ್ಲಿ ಕೈಗೊಳ್ಳಲಾಯಿತು.

ಸಭೆಯಲ್ಲಿ ಕೈಗೊಂಡ ನಿರ್ಧಾರಗಳು:

1. ಕೋವಿಡ್ ಮುಂಜಾಗ್ರತೆ ಕ್ರಮವಾಗಿ ಜಾರಿಗೊಳಿಸುವ ಮಾರ್ಗಸೂಚಿಗಳು ಈ ತಿಂಗಳ ಅಂತ್ಯದವರೆಗೆ ವಿಸ್ತರಣೆ.

2. ಶಾಲಾ ಮಕ್ಕಳಲ್ಲಿ ಕೋವಿಡ್ ಹೆಚ್ಚುತ್ತಿರುವ ಕುರಿತು ಸಭೆಯಲ್ಲಿ ಚರ್ಚೆ. ಪ್ರಕರಣಗಳನ್ನು ಆಧರಿಸಿ ಬಿಇಓ ಮತ್ತು ತಾಲೂಕು ಆರೋಗ್ಯಾಧಿಕಾರಿಗಳ ವರದಿ ಆಧರಿಸಿ, ಶಾಲೆಗಳನ್ನು ಮುಚ್ಚುವ ಕುರಿತು ತೀರ್ಮಾನ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ.

3. ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತ ಮಕ್ಕಳಿಗೆ ಚಿಕಿತ್ಸೆ ನೀಡಲು ಮಕ್ಕಳ ವಾರ್ಡ್, ಐಸಿಯುಗಳನ್ನು ಮೀಸಲಿರಿಸಲು ಸೂಚನೆ.

4. ಕೋವಿಡ್ ಸೋಂಕಿತ ಮಕ್ಕಳ ಚಿಕಿತ್ಸೆಗೆ ಅಗತ್ಯವಿರುವ ಔಷಧಿಗಳನ್ನು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಮಾಡಿಕೊಳ್ಳುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚನೆ.

5. ಶಿಕ್ಷಣ ಮತ್ತು ಆರೋಗ್ಯ ಇಲಾಖೆಗಳು ಜಂಟಿಯಾಗಿ ಎಲ್ಲ ಶಾಲೆಗಳಲ್ಲಿ 15 ದಿನಗಳಿಗೊಮ್ಮೆ ಮಕ್ಕಳ ಸಾಮಾನ್ಯ ಆರೋಗ್ಯ ತಪಾಸಣೆ ಮಾಡುವಂತೆ ಸೂಚನೆ.

6. ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್ ಮುಂಜಾಗ್ರತಾ ಕ್ರಮವಾಗಿ ವಿಧಿಸಿರುವ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ.

7. ಮೂರನೇ ಅಲೆಯಲ್ಲಿ ಹೋಮ್ ಐಸೋಲೇಷನ್​ನಲ್ಲಿ ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇವರ ಆರೋಗ್ಯ ಸ್ಥಿತಿಯ ಮೇಲ್ವಿಚಾರಣೆಯನ್ನು ನಿಯಮಿತವಾಗಿ ಮಾಡುವಂತೆ ಹಾಗೂ ಸೂಕ್ತ ಔಷಧಿಗಳ ಕಿಟ್ ಒದಗಿಸಬೇಕು.

8. ಪರೀಕ್ಷಾ ವರದಿ ಬಂದ ಕೂಡಲೇ ಸೋಂಕಿತರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಿ, ಆಸ್ಪತ್ರೆಗೆ ದಾಖಲಿಸುವ ಅಗತ್ಯವಿದೆಯೇ? ಇಲ್ಲವೇ? ಎಂದು ನಿರ್ಧರಿಸುವ ಟ್ರಯಾಜಿಂಗ್ ವ್ಯವಸ್ಥೆಯನ್ನು ಬಲಪಡಿಸಬೇಕು.

9. ಹೋಮ್ ಐಸೊಲೇಷನ್ ಮತ್ತು ಟ್ರಯಾಜಿಂಗ್ ಪ್ರಕ್ರಿಯೆಯಲ್ಲಿ ಹೌಸ್ ಸರ್ಜನ್ ವೈದ್ಯರು ಹಾಗೂ ಅಂತಿಮ ವರ್ಷದ ನರ್ಸಿಂಗ್ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲು ನಿರ್ಧಾರ.

10. ಬೆಂಗಳೂರಿನಲ್ಲಿ ಕೂಡಲೇ 27 ಕೋವಿಡ್ ಕೇರ್ ಸೆಂಟರ್​ಗಳನ್ನು ಪ್ರಾರಂಭಿಸಲು ನಿರ್ಧಾರ.

11. ಮುಂಬರುವ ಸಂಕ್ರಾಂತಿ, ವೈಕುಂಠ ಏಕಾದಶಿ ಮತ್ತಿತರ ಹಬ್ಬಗಳ ಸಂದರ್ಭದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಹೊರಡಿಸುವಂತೆ ಕಂದಾಯ ಮತ್ತು ಮುಜರಾಯಿ ಇಲಾಖೆಗೆ ಸೂಚನೆ.

12. ಕೋವಿಡ್ ಲಸಿಕೆಯ ಎರಡೂ ಡೋಸ್‌ಗಳನ್ನು ಪಡೆದು 9 ತಿಂಗಳು ಪೂರೈಸಿದ ಮುಂಚೂಣಿಯ ಕಾರ್ಯಕರ್ತರಿಗೆ 3ನೇ ಡೋಸ್ ಅನ್ನು ಆದ್ಯತೆಯ ಮೇರೆಗೆ ನೀಡಲು ಸೂಚಿಸಿಲಾಗಿದೆ.

13. ಬಿಬಿಎಂಪಿ ವ್ಯಾಪ್ತಿಯಲ್ಲಿ ಪರೀಕ್ಷಾ ಪ್ರಮಾಣವನ್ನು ದಿನಕ್ಕೆ 1.3 ಲಕ್ಷ ವರೆಗೆ ಹೆಚ್ಚಸಲು ನಿರ್ಧಾರ.

14. ಯಾವುದೇ ರೀತಿಯ ಸಾರ್ವಜನಿಕ ಸಮಾವೇಶಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

15. ಮಾರುಕಟ್ಟೆ ಪ್ರದೇಶದಲ್ಲಿ ಜನದಟ್ಟಣೆ ಕಡಿಮೆಗೊಳಿಸಲು ವಸ್ತುಸ್ಥಿತಿ ಆಧರಿಸಿ ಕ್ರಮ ಕೈಗೊಳ್ಳಬೇಕು.

16. ರಾಜ್ಯದಲ್ಲಿ ಯಾವುದೇ ರೀತಿಯ ಸಿದ್ಧತೆಯಲ್ಲಿ ಲೋಪವಾಗದಂತೆ ಕ್ರಮ ವಹಿಸಬೇಕು.

ವರ್ಚುವಲ್ ಮೂಲಕ ನಡೆದ ಸಭೆಯಲ್ಲಿ ಸಚಿವರಾದ ಡಾ.ಕೆ.ಸುಧಾಕರ್, ಬಿ.ಸಿ.ನಾಗೇಶ್, ಆರಗ ಜ್ಞಾನೇಂದ್ರ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ. ಸುದರ್ಶನ್ ಮತ್ತು ಇತರ ಸದಸ್ಯರು ಹಾಗೂ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!