ಬೆಳ್ತಂಗಡಿ: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಪಂಚಗ್ಯಾರಂಟಿ ಯೋಜನೆಗಳನ್ನು ಬೆಳ್ತಂಗಡಿ ತಾಲೂಕಿನ ಜನರಿಗೆ ಸಮರ್ಪಕವಾಗಿ ತಲುಪಿಸುವಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಯಶಸ್ವಿಯಾಗಿದ್ದು, ಕಳೆದ ಮೂರು ವರ್ಷಗಳಲ್ಲಿ ಫಲಾನುಭವಿಗಳಿಗೆ ಒಟ್ಟು ₹674.47 ಕೋಟಿ ಮೊತ್ತ ಜಮೆಯಾಗಿದೆ. ಜಿಲ್ಲಾಮಟ್ಟದಲ್ಲಿ ಬೆಳ್ತಂಗಡಿ ತಾಲೂಕು ಸಮಿತಿ ಪ್ರಥಮ ಸ್ಥಾನದಲ್ಲಿದೆ ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ಮಾಲಾಡಿ ತಿಳಿಸಿದರು.
ಶನಿವಾರ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರದ ಆದೇಶದಂತೆ ನೂತನ ಸಮಿತಿ ರಚನೆಯಾಗಲಿದ್ದು, ತಮ್ಮ ಮೂರು ವರ್ಷಗಳ ಅವಧಿಯಲ್ಲಿ ಸಹಕಾರ ನೀಡಿದ ಸಾರ್ವಜನಿಕರು, ಅಧಿಕಾರಿಗಳು, ಸಿಬ್ಬಂದಿ ಹಾಗೂ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು.
ರಾಜ್ಯ ಸರಕಾರ ಜಾರಿಗೊಳಿಸಿರುವ ಪಂಚಗ್ಯಾರಂಟಿ ಯೋಜನೆಗಳು ಜನರ ಬದುಕಿನಲ್ಲಿ ಹೊಸ ಭರವಸೆ ಮೂಡಿಸಿವೆ. ಗೃಹಲಕ್ಷ್ಮಿ ಯೋಜನೆಯು ಕುಟುಂಬದ ಮಹಿಳೆಯರಿಗೆ ಆರ್ಥಿಕ ನೆರವು ನೀಡಿದರೆ, ಗೃಹಜ್ಯೋತಿ ಯೋಜನೆಯು ವಿದ್ಯುತ್ ವೆಚ್ಚದ ಹೊರೆ ತಗ್ಗಿಸಿದೆ. ಅನ್ನಭಾಗ್ಯ ಯೋಜನೆಯು ಬಡ ಕುಟುಂಬಗಳಿಗೆ ಆಹಾರ ಭದ್ರತೆ ಒದಗಿಸಿದೆ. ಶಕ್ತಿ ಯೋಜನೆಯು ಮಹಿಳೆಯರ ಪ್ರಯಾಣಕ್ಕೆ ನೆರವಾಗಿದ್ದು, ಯುವನಿಧಿ ಯೋಜನೆಯು ನಿರುದ್ಯೋಗಿ ಯುವಜನರಿಗೆ ಆರ್ಥಿಕ ಬೆಂಬಲ ನೀಡಿದೆ ಎಂದು ಅವರು ವಿವರಿಸಿದರು.
ಈ ಎಲ್ಲ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನವನ್ನು ಕಾಯ್ದುಕೊಳ್ಳಲು ಸಹಕರಿಸಿದ ಐದು ಇಲಾಖೆಗಳ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ ಅವರು ಧನ್ಯವಾದ ಅರ್ಪಿಸಿದರು.
ಯೋಜನೆಗಳ ಕುರಿತು ಶಿಬಿರಗಳು ಹಾಗೂ ಸಭೆಗಳಲ್ಲಿ ನಡೆದ ವಿಚಾರಗಳನ್ನು ಜನರಿಗೆ ತಲುಪಿಸಿದ ಪತ್ರಿಕಾ ಮತ್ತು ದೃಶ್ಯ ಮಾಧ್ಯಮದ ಪ್ರತಿನಿಧಿಗಳಿಗೂ ಕೃತಜ್ಞತೆ ಸಲ್ಲಿಸಿದರು. ಸಮಿತಿಯ ಕಾರ್ಯದರ್ಶಿ ಹಾಗೂ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್, ತಾಲೂಕು ನೋಡಲ್ ಅಧಿಕಾರಿ ಹೆರಾಲ್ಡ್ ಸಿಕ್ವೆರಾ, ತಾಲೂಕು ಪಂಚಾಯತ್ ಸಿಬ್ಬಂದಿ, ಸಮಿತಿಯ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಹಕರಿಸಿದ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಹಕಾರವನ್ನು ಸ್ಮರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಮಿತಿ ಸದಸ್ಯರಾದ ನೇಮಿರಾಜ್ ಕಿಲ್ಲೂರು, ಸೌಮ್ಯಾ ಲಾಯಿಲ, ಮರಿಟಾ ಪಿಂಟೋ, ಶರೀಫ್ ಸಬರಬೈಲು, ವಿಜಯ ಗೌಡ ಬೇಳಾಲು ಹಾಗೂ ವೀರಪ್ಪ ಮೊಯ್ಲಿ ಬಂಗಾಡಿ ಉಪಸ್ಥಿತರಿದ್ದರು.

