ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ರಾಷ್ಟ್ರೀಯ ಇಲಾಬೆನ್ ಸ್ಮಾರಕ ಪ್ರಶಸ್ತಿ:

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ರಾಷ್ಟ್ರೀಯ ಇಲಾಬೆನ್ ಸ್ಮಾರಕ ಪ್ರಶಸ್ತಿ:




ಉಜಿರೆ: ಭಾರತೀಯ ರಿಸರ್ವ್ ಬ್ಯಾಂಕ್‌ನಿಂದ ನಿಯೋಜಿತ ಸ್ವಯಂ ನಿಯಂತ್ರಕ ಸಂಸ್ಥೆಯಾದ ಸಾ-ಧನ್ (Sa-Dhan) ಸಂಸ್ಥೆಯು ದೆಹಲಿಯಲ್ಲಿ ಇತ್ತೀಚೆಗೆ ಆಯೋಜಿಸಿದ 21ನೇ ರಾಷ್ಟ್ರೀಯ ಸಮಾವೇಶದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ಗೆ 2025-26ನೇ ಸಾಲಿನ ‘ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ – ಇಲಾಬೆನ್ ಸ್ಮಾರಕ ಪ್ರಶಸ್ತಿ’ ನೀಡಿ ಗೌರವಿಸಿದೆ.ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮಾಭಿವೃದ್ಧಿ ಯೋಜನೆಯು ಮಹಿಳಾ ಕಾರ್ಯಕರ್ತರಿಗೆ ಸುರಕ್ಷಿತ ಕಾರ್ಯಸ್ಥಳ, ಉತ್ತಮ ಬಾಂಧವ್ಯ ಹಾಗೂ ಸಮಾನ ಅವಕಾಶಗಳನ್ನು ಒದಗಿಸುತ್ತಿರುವ ಹಿನ್ನೆಲೆಯಲ್ಲಿ ಈ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದೆ.ಪ್ರಶಸ್ತಿಯನ್ನು ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಎಸ್.ಎಸ್., ಮುಖ್ಯ ಹಣಕಾಸು ಅಧಿಕಾರಿ ಶಾಂತರಾಮ್ ಆರ್. ಪೈ, ಪ್ರಾದೇಶಿಕ ನಿರ್ದೇಶಕರಾದ ಗೀತಾ ಬಿ. ಹಾಗೂ ದಯಾಶೀಲ ಅವರು ಸ್ವೀಕರಿಸಿದರು.



ಸಾ-ಧನ್ ಸಂಸ್ಥೆಯು ದೇಶದ 210 ಆರ್ಥಿಕ ಸಂಸ್ಥೆಗಳನ್ನು ನೋಂದಾಯಿಸಿಕೊಂಡಿರುವ ಸ್ವಯಂ ನಿಯಂತ್ರಕ ಸಂಸ್ಥೆಯಾಗಿದ್ದು, ಬ್ಯಾಂಕ್‌ಗಳು, ಬ್ಯಾಂಕಿಂಗ್ ಪ್ರತಿನಿಧಿ ಸಂಸ್ಥೆಗಳು, ಬ್ಯಾಂಕೇತರ ಹಣಕಾಸು ಸಂಸ್ಥೆಗಳು (ಎನ್‌ಬಿಎಫ್‌ಸಿ), ಸಣ್ಣ ಹಣಕಾಸು ಬ್ಯಾಂಕ್‌ಗಳು, ಕಿರು ಆರ್ಥಿಕ ಸಂಸ್ಥೆಗಳು ಹಾಗೂ ಸಹಕಾರ ಸಂಘಗಳನ್ನು ಸದಸ್ಯರನ್ನಾಗಿ ಹೊಂದಿದೆ. ಮಹಿಳಾ ಸಬಲೀಕರಣಕ್ಕೆ ಮಹತ್ವದ ಕೊಡುಗೆ ನೀಡಿದ ಇಲಾಬೆನ್ ಅವರ ಸ್ಮರಣಾರ್ಥ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಇದು ಕಿರು ಆರ್ಥಿಕ ವಲಯದ ಪ್ರಮುಖ ರಾಷ್ಟ್ರೀಯ ಪ್ರಶಸ್ತಿಗಳಲ್ಲಿ ಒಂದಾಗಿದೆ.


ಮಹಿಳಾ ಕಾರ್ಯಕರ್ತರಿಗೆ ಸುರಕ್ಷಿತ ಕಾರ್ಯವಾತಾವರಣ


ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಒಟ್ಟು 41 ಸಾವಿರ ಕಾರ್ಯಕರ್ತರು ಕಾರ್ಯನಿರ್ವಹಿಸುತ್ತಿದ್ದು, ಅವರಲ್ಲಿ 29 ಸಾವಿರ ಮಂದಿ ಮಹಿಳೆಯರಾಗಿದ್ದಾರೆ. ಮಹಿಳಾ ಕಾರ್ಯಕರ್ತರು ಸುರಕ್ಷಿತ ವಾತಾವರಣದಲ್ಲಿ ಕಾರ್ಯನಿರ್ವಹಿಸಲು ಸಂಸ್ಥೆಯು ವಿಶೇಷ ಆದ್ಯತೆ ನೀಡಿದೆ. ಆಧುನಿಕ ತಂತ್ರಜ್ಞಾನ, ನಿರಂತರ ತರಬೇತಿ, ಉತ್ತಮ ಆಡಳಿತ ವ್ಯವಸ್ಥೆ ಹಾಗೂ ಸಕಾರಾತ್ಮಕ ಕಾರ್ಯಸಂಸ್ಕೃತಿಯ ಮೂಲಕ ಕಾರ್ಯಕರ್ತರ ವೃತ್ತಿಪರ ಬೆಳವಣಿಗೆಗೆ ಅವಕಾಶ ಕಲ್ಪಿಸಲಾಗಿದೆ.ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹಿಳಾ ಕಾರ್ಯಕರ್ತರ ಕುಟುಂಬದ ಪರಿಸ್ಥಿತಿ ಹಾಗೂ ಅನುಕೂಲಗಳಿಗೆ ಆದ್ಯತೆ ನೀಡಲಾಗುತ್ತಿದೆ. ಪಾರದರ್ಶಕ ಭಡ್ತಿ ಪ್ರಕ್ರಿಯೆಯ ಮೂಲಕ ಮಹಿಳೆಯರಿಗೆ ಸಮಾನ ಅವಕಾಶಗಳನ್ನು ಒದಗಿಸುವುದರೊಂದಿಗೆ ನಾಯಕತ್ವದ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ಪ್ರೋತ್ಸಾಹಿಸಲಾಗುತ್ತಿದೆ.ಮಹಿಳೆಯರ ಸುರಕ್ಷತೆಗೆ ಸಂಬಂಧಿಸಿದಂತೆ ಲೈಂಗಿಕ ಕಿರುಕುಳ ತಡೆ ಕಾಯಿದೆ (POSH) ಕುರಿತು ಆಯ್ದ ಮಹಿಳಾ ಕಾರ್ಯಕರ್ತರಿಗೆ ವಿಶೇಷ ತರಬೇತಿ ನೀಡಲಾಗಿದೆ. ಮಹಿಳಾ ಕಾರ್ಯಕರ್ತರ ಸುರಕ್ಷತೆಗೆ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗಿದ್ದು, ನಿಯಮಗಳ ಉಲ್ಲಂಘನೆಯಾದಲ್ಲಿ ಸೂಕ್ತ ಕ್ರಮ ಕೈಗೊಳ್ಳುವ ವ್ಯವಸ್ಥೆಯನ್ನೂ ರೂಪಿಸಲಾಗಿದೆ.


ಆರೋಗ್ಯ ಮತ್ತು ಕಲ್ಯಾಣಕ್ಕೆ ವಿಶೇಷ ಆದ್ಯತೆ


ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಮಹಿಳಾ ಕಾರ್ಯಕರ್ತರ ಆರೋಗ್ಯ ಮತ್ತು ಕಲ್ಯಾಣಕ್ಕೆ ವಿಶೇಷ ಗಮನ ನೀಡಲಾಗುತ್ತಿದೆ. ಪೌಷ್ಟಿಕ ಆಹಾರ, ಆರೋಗ್ಯ ಜಾಗೃತಿ ಕಾರ್ಯಕ್ರಮಗಳು ಹಾಗೂ ವೈದ್ಯಕೀಯ ಶಿಬಿರಗಳ ಮೂಲಕ ಆರೋಗ್ಯದ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಅಲ್ಲದೆ, ಕಾರ್ಯಕರ್ತರಿಗೆ ವಾರ್ಷಿಕವಾಗಿ ಸುಮಾರು ಐದು ಲಕ್ಷ ರೂಪಾಯಿ ಮೌಲ್ಯದ ಆರೋಗ್ಯ ವಿಮಾ ಸೌಲಭ್ಯವನ್ನು ಒದಗಿಸಲಾಗಿದೆ.ಮಹಿಳೆಯರಿಗೆ ಉತ್ತಮ ಕಾರ್ಯಾವಕಾಶಗಳನ್ನು ಕಲ್ಪಿಸುವುದು, ಪರಸ್ಪರ ಗೌರವ ಮತ್ತು ವಿಶ್ವಾಸದ ವಾತಾವರಣವನ್ನು ನಿರ್ಮಿಸುವುದು, ನಾಯಕತ್ವದ ಗುಣಗಳನ್ನು ಬೆಳೆಸುವುದು ಹಾಗೂ ವೃತ್ತಿಪರ ಪ್ರಗತಿಗೆ ಅವಕಾಶ ನೀಡುವುದು ಸಂಸ್ಥೆಯ ಪ್ರಮುಖ ಆಶಯಗಳಾಗಿವೆ.


ಮಹಿಳಾ ಸಬಲೀಕರಣಕ್ಕೆ ಮಹತ್ವದ ಕೊಡುಗೆ


ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯು 6,547 ಮಹಿಳಾ ಜ್ಞಾನವಿಕಾಸ ಕೇಂದ್ರಗಳ ಮೂಲಕ 3,29,609 ಸದಸ್ಯರ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಇದೇ ರೀತಿ, ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಸೇವೆಯ ಮೂಲಕ ಸುಮಾರು 42 ಲಕ್ಷ ಮಹಿಳೆಯರು ಬ್ಯಾಂಕ್‌ಗಳಿಂದ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಪಡೆದು ಸ್ವಾವಲಂಬಿ ಬದುಕು ರೂಪಿಸಿಕೊಳ್ಳಲು ನೆರವಾಗಿದೆ. ಆರ್ಥಿಕ ಪ್ರಗತಿಯೊಂದಿಗೆ ಸಾಮಾಜಿಕವಾಗಿಯೂ ಸಬಲರಾಗಲು ಈ ಕಾರ್ಯಕ್ರಮಗಳು ಸಹಕಾರಿಯಾಗಿವೆ.ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿರುವ ಗ್ರಾಮಾಭಿವೃದ್ಧಿ ಯೋಜನೆಯ ಸಾಧನೆಗಳಲ್ಲಿ ಮಹಿಳಾ ಕಾರ್ಯಕರ್ತರ ಪಾತ್ರ ಮಹತ್ವದ್ದಾಗಿದೆ. ಅವರ ಪರಿಶ್ರಮ, ಬದ್ಧತೆ ಹಾಗೂ ಉತ್ತಮ ಕಾರ್ಯಸಂಸ್ಕೃತಿಯು ಸಂಸ್ಥೆಯ ಬೆಳವಣಿಗೆಗೆ ಬಲ ನೀಡಿದೆ ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಎಸ್.ಎಸ್. ಅವರು ತಿಳಿಸಿದ್ದಾರೆ. ಪ್ರಶಸ್ತಿಗೆ ಪಾತ್ರರಾದ ಮಹಿಳಾ ಕಾರ್ಯಕರ್ತರು ಹಾಗೂ ಸಂಸ್ಥೆಯ ಎಲ್ಲ ಸಿಬ್ಬಂದಿಯನ್ನು ಅವರು ಅಭಿನಂದಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!