ಮಂಗಳೂರು: ಪ್ರಾರ್ಥನೆಗೆ ಬರುತ್ತಿದ್ದ ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮಂಗಳೂರಿನ ವೆಲೆನ್ಸಿಯಾದಲ್ಲಿರುವ ಚರ್ಚ್ನ ಫಾದರ್ ಸಿಪ್ರಿಯನ್ ಪಿಂಟೋ ವಿರುದ್ಧ ಮಂಗಳೂರು ದಕ್ಷಿಣ (ಪಾಂಡೇಶ್ವರ) ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಎಫ್ಐಆರ್ ದಾಖಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ದೂರಿನ ಪ್ರಕಾರ, ಬಾಲಕನು ಚರ್ಚ್ಗೆ ಪ್ರಾರ್ಥನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಆರೋಪಿ ಫಾದರ್ ಚಾಕಲೇಟ್ ನೀಡಿ ಪುಸಲಾಯಿಸಿ ಚರ್ಚ್ನ ಕೊಠಡಿಗೆ ಕರೆದೊಯ್ದು ಅನುಚಿತವಾಗಿ ವರ್ತಿಸುತ್ತಿದ್ದರು ಎನ್ನಲಾಗಿದೆ. ಬಳಿಕವೂ ಬಾಲಕ ಪ್ರಾರ್ಥನೆಗೆ ಹೋದಾಗಲೆಲ್ಲ ಕಿರುಕುಳ ಮುಂದುವರಿದಿತ್ತು ಎಂದು ಆರೋಪಿಸಲಾಗಿದೆ.
ಆಗಸ್ಟ್ 14ರಂದು ಸಂಜೆ ಸುಮಾರು 6:30ರ ವೇಳೆಗೆ ಪ್ರಾರ್ಥನೆಗೆ ತೆರಳಿದ್ದ ಬಾಲಕನನ್ನು ರಿಸೆಪ್ಷನಿಸ್ಟ್ ಕೊಠಡಿಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಸ್ನೇಹಿತರಿಗೂ ಕಿರುಕುಳ ನೀಡಿರುವ ಆರೋಪ
ತಮಗಾದ ಕಿರುಕುಳದ ಕುರಿತು ಬಾಲಕನು ಸ್ನೇಹಿತರೊಂದಿಗೆ ಮಾತನಾಡಿದಾಗ, ಅವರಿಗೂ ಇದೇ ರೀತಿಯ ಅನುಭವವಾಗಿರುವುದಾಗಿ ತಿಳಿದುಬಂದಿದೆ ಎಂದು ದೂರಿನಲ್ಲಿ ಹೇಳಲಾಗಿದೆ. ಬಳಿಕ ಬಾಲಕ ತನ್ನ ಪೋಷಕರಿಗೆ ವಿಷಯ ತಿಳಿಸಿದ್ದು, ಪೋಷಕರು ಬಿಷಪ್ ಅವರನ್ನು ಭೇಟಿಯಾಗಿ ಘಟನೆಯನ್ನು ವಿವರಿಸಿದ್ದಾರೆ. ಬಿಷಪ್ ಅವರ ಸಲಹೆಯಂತೆ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ವರದಿಯಾಗಿದೆ.
ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು
ದೂರಿನ ಆಧಾರದ ಮೇಲೆ ಪೊಲೀಸರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (POCSO Act), 2012ರ ಕಲಂ 8 ಮತ್ತು 10 ಹಾಗೂ ಭಾರತೀಯ ನ್ಯಾಯ ಸಂಹಿತೆ (BNS), 2023ರ ಕಲಂ 75(2) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.


