ಬೆಳ್ತಂಗಡಿ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹15,000 ಗೌರವಧನ ನೀಡುವುದಾಗಿ ಘೋಷಿಸಿದ್ದ ಭರವಸೆಯನ್ನು ಈಡೇರಿಸಬೇಕು. ನಾಲ್ಕು ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿರುವ ಸಾವಿರಾರು ಆಶಾ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಬೇಕು ಎಂದು ಹರೀಶ್ ಪೂಂಜ ಆಗ್ರಹಿಸಿದ್ದಾರೆ.
ರಾಜ್ಯದ ಆರೋಗ್ಯ ವ್ಯವಸ್ಥೆಯ ತಳಮಟ್ಟದಲ್ಲಿ ಅತ್ಯಂತ ಮಹತ್ವದ ಜವಾಬ್ದಾರಿ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು ತಮ್ಮ ಹಕ್ಕುಗಳಿಗಾಗಿ ಬೀದಿಗಿಳಿದು ಹೋರಾಟ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿರುವುದು ಸರ್ಕಾರದ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ ಎಂದು ಅವರು ಕಿಡಿಕಾರಿದ್ದಾರೆ.
ಗರ್ಭಿಣಿಯರ ಆರೈಕೆ, ತಾಯಿ ಮತ್ತು ಮಕ್ಕಳ ಆರೋಗ್ಯ ರಕ್ಷಣೆ, ಲಸಿಕಾ ಕಾರ್ಯಕ್ರಮಗಳು ಹಾಗೂ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಸೇರಿದಂತೆ ಸಾರ್ವಜನಿಕ ಆರೋಗ್ಯ ಸೇವೆಗಳಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಹಗಲಿರುಳು ಶ್ರಮಿಸುವ ಈ ಮಹಿಳೆಯರಿಗೆ ಅವರ ಸೇವೆಗೆ ತಕ್ಕ ಗೌರವಧನ ಮತ್ತು ಬದುಕಿನ ಭದ್ರತೆ ಒದಗಿಸುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ತಿಳಿಸಿದ್ದಾರೆ.
ಚುನಾವಣಾ ಸಂದರ್ಭದಲ್ಲಿ ಜನರಿಗೆ ನೀಡುವ ಭರವಸೆಗಳು ಕೇವಲ ಅಧಿಕಾರ ಗಳಿಸುವ ರಾಜಕೀಯ ತಂತ್ರಗಳಾಗಬಾರದು. ಕಾಂಗ್ರೆಸ್ ಪಕ್ಷವೇ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ ಮಾಸಿಕ ₹15,000 ಗೌರವಧನದ ಭರವಸೆಯನ್ನು ಈಡೇರಿಸಲು ವಿಫಲವಾಗಿರುವುದು ಖಂಡನೀಯ. ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಜೀವನ ನಿರ್ವಹಣೆಯ ವೆಚ್ಚ ಹೆಚ್ಚುತ್ತಿರುವ ಸಂದರ್ಭದಲ್ಲಿ ಅಲ್ಪ ಗೌರವಧನದಲ್ಲಿ ಜೀವನ ಸಾಗಿಸುವುದು ಆಶಾ ಕಾರ್ಯಕರ್ತೆಯರಿಗೆ ಕಷ್ಟಕರವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಮಹಿಳಾ ಸಬಲೀಕರಣದ ಕುರಿತು ಮಾತನಾಡುವ ಸರ್ಕಾರ, ಸಾವಿರಾರು ಮಹಿಳೆಯರು ತಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ನಾಲ್ಕು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವುದಕ್ಕೆ ಉತ್ತರ ನೀಡಬೇಕು. ಆಶಾ ಕಾರ್ಯಕರ್ತೆಯರ ಸೇವೆಯನ್ನು ಗುರುತಿಸುವುದರ ಜೊತೆಗೆ ಅವರ ಆರ್ಥಿಕ ಮತ್ತು ಸಾಮಾಜಿಕ ಭದ್ರತೆಗೂ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ರಾಜ್ಯ ಸರ್ಕಾರ ಕೂಡಲೇ ಪ್ರತಿಭಟನಾನಿರತ ಆಶಾ ಕಾರ್ಯಕರ್ತೆಯರ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿ, ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಮಾಸಿಕ ₹15,000 ಗೌರವಧನ ನೀಡುವ ಭರವಸೆಯನ್ನು ಈಡೇರಿಸಬೇಕು. ಅವರ ಇತರ ನ್ಯಾಯಯುತ ಬೇಡಿಕೆಗಳ ಬಗ್ಗೆಯೂ ಸಕಾರಾತ್ಮಕ ನಿರ್ಧಾರ ಕೈಗೊಂಡು ಪ್ರತಿಭಟನೆಯನ್ನು ಗೌರವಯುತವಾಗಿ ಅಂತ್ಯಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಹರೀಶ್ ಪೂಂಜ ಆಗ್ರಹಿಸಿದ್ದಾರೆ.
ಆಶಾ ಕಾರ್ಯಕರ್ತೆಯರು ಹೊಸ ಬೇಡಿಕೆಯನ್ನೇನೂ ಮುಂದಿಟ್ಟಿಲ್ಲ; ಕಾಂಗ್ರೆಸ್ ಪಕ್ಷವೇ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯನ್ನು ಈಡೇರಿಸುವಂತೆ ಕೇಳುತ್ತಿದ್ದಾರೆ. ಜನರಿಗೆ ನೀಡಿದ ಮಾತನ್ನು ಉಳಿಸಿಕೊಳ್ಳಲು ಸರ್ಕಾರಕ್ಕೆ ಇನ್ನೂ ಎಷ್ಟು ಹೋರಾಟಗಳು ನಡೆಯಬೇಕು? ಜನರ ಆರೋಗ್ಯಕ್ಕೆ ಆಶಾಕಿರಣವಾಗಿರುವ ಆಶಾ ಕಾರ್ಯಕರ್ತೆಯರ ಬದುಕಿಗೂ ಸರ್ಕಾರ ಆಶಾಕಿರಣವಾಗಲಿ ಎಂದು ಅವರು ಒತ್ತಾಯಿಸಿದ್ದಾರೆ.



