ಬೆಳ್ತಂಗಡಿ: ಕನ್ನಡಿಗರು ನೀರಿನಂತೆ ಜಗತ್ತಿನ ಎಲ್ಲೆಡೆ ಹರಡಿ, ಅಲ್ಲಿನ ಪರಿಸರ ಹಾಗೂ ಸಂಸ್ಕೃತಿಯೊಂದಿಗೆ ಬೆರೆತು ಬದುಕುವ ಸ್ವಭಾವ ಹೊಂದಿದ್ದಾರೆ. ಆದರೆ ಜಗತ್ತಿನ ಯಾವುದೇ ಭಾಗದಲ್ಲಿದ್ದರೂ ನಮ್ಮ ಭಾಷೆ, ಸಂಸ್ಕೃತಿ ಮತ್ತು ಮೂಲ ಪರಂಪರೆಯನ್ನು ಮರೆಯಬಾರದು. ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬ ಕನ್ನಡಿಗನ ಮೇಲಿದೆ. ವಿಶೇಷವಾಗಿ ಯುವಜನತೆಯಲ್ಲಿ ಕನ್ನಡ ಭಾಷೆಯ ಬಗ್ಗೆ ಅಭಿಮಾನ ಹಾಗೂ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹೆಚ್ಚಿನ ಪ್ರಯತ್ನಗಳು ನಡೆಯಬೇಕಾಗಿದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹೇಳಿದರು.
ಅವರು ನವೆಂಬರ್ 1ರಂದು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬೆಳ್ತಂಗಡಿ ವತಿಯಿಂದ ತಾಲೂಕು ಆಡಳಿತ ಸೌಧದ ಆವರಣದಲ್ಲಿ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಾತೃಭಾಷೆ ಕೇವಲ ಸಂವಹನದ ಮಾಧ್ಯಮವಲ್ಲ, ಅದು ನಮ್ಮ ಭಾವನೆ, ಸಂಸ್ಕೃತಿ, ಪರಂಪರೆ ಹಾಗೂ ಸಂಬಂಧಗಳ ಪ್ರತೀಕವಾಗಿದೆ. ಮಾತೃಭಾಷೆಯ ಮೂಲಕವೇ ನಮ್ಮ ನಡುವಿನ ಆತ್ಮೀಯ ಸಂಬಂಧಗಳನ್ನು ಗಟ್ಟಿಯಾಗಿ ಉಳಿಸಿಕೊಳ್ಳಲು ಸಾಧ್ಯ. ಕನ್ನಡ ಭಾಷೆಯ ಬಳಕೆ ಮನೆಮನೆಗಳಲ್ಲಿ ಹೆಚ್ಚಾಗಬೇಕು. ಮಕ್ಕಳಿಗೆ ಬಾಲ್ಯದಿಂದಲೇ ಕನ್ನಡ ಭಾಷೆಯ ಮಹತ್ವವನ್ನು ತಿಳಿಸಿಕೊಡುವ ಕೆಲಸವಾಗಬೇಕು. ಶಿಕ್ಷಣ, ಸಾಹಿತ್ಯ, ಕಲೆ, ಸಂಸ್ಕೃತಿ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿಯೂ ಕನ್ನಡದ ಬಳಕೆ ಮತ್ತು ಬೆಳವಣಿಗೆಗೆ ಪ್ರೋತ್ಸಾಹ ನೀಡಬೇಕು. ಕನ್ನಡಿಗರು ವಿಶ್ವದ ಯಾವುದೇ ಮೂಲೆಯಲ್ಲಿ ನೆಲೆಸಿದ್ದರೂ ಕನ್ನಡದ ಮೇಲಿನ ಪ್ರೀತಿ ಮತ್ತು ಅಭಿಮಾನವನ್ನು ಉಳಿಸಿಕೊಂಡು ಮುಂದಿನ ಪೀಳಿಗೆಗೆ ಭಾಷೆಯ ಪರಂಪರೆಯನ್ನು ಪರಿಚಯಿಸಬೇಕು ಎಂದು ಅವರು ತಿಳಿಸಿದರು.
ಕನ್ನಡ ರಾಜ್ಯೋತ್ಸವವು ಕೇವಲ ಒಂದು ದಿನದ ಆಚರಣೆಗೆ ಸೀಮಿತವಾಗದೆ, ವರ್ಷವಿಡೀ ಕನ್ನಡ ಭಾಷೆ, ನಾಡು, ನುಡಿ ಮತ್ತು ಸಂಸ್ಕೃತಿಯ ಸಂರಕ್ಷಣೆಗೆ ಪ್ರೇರಣೆಯಾಗಬೇಕು. ಕನ್ನಡದ ಬಳಕೆಯನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಭಾಷೆಯ ಬೆಳವಣಿಗೆಗೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಎಸ್.ಎನ್. ನರಗುಂದ ಧ್ವಜಾರೋಹಣ ನೆರವೇರಿಸಿದರು. ಬಿ.ಪಿ. ಸಂಪತ್ ಕುಮಾರ್ ಪ್ರಧಾನ ಭಾಷಣ ಮಾಡಿದರು. ಕನ್ನಡ ನಾಡು, ನುಡಿ, ಭಾಷೆ ಮತ್ತು ಸಂಸ್ಕೃತಿಯ ಮಹತ್ವವನ್ನು ಸಾರುವ ರಾಜ್ಯೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಂದ ನೃತ್ಯ ಕಾರ್ಯಕ್ರಮ ನಡೆಯಿತು.
ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಸ್ವಾಗತಿಸಿದರು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು, ಸಂಘ ಸಂಸ್ಥೆಯ ಪ್ರಮುಖರು, ವಿವಿಧ ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.








