ಮಂಗಳೂರು: ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ನಡುವಿನ ಸಂಪರ್ಕ ಕೊಂಡಿಯಾಗಿರುವ ಶಿಶಿಲ–ಬೈರಾಪುರ ರಸ್ತೆ ಸಂಪರ್ಕದ ಪುನರುಜ್ಜೀವನಕ್ಕೆ ಇದೀಗ ಮತ್ತೆ ವೇಗ ದೊರೆತಿದೆ. ಈ ಭಾಗದ ಜನರ ದಶಕಗಳ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ವಿಶೇಷ ಮುತುವರ್ಜಿ ವಹಿಸಿದ್ದು, ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದ ಸಮಗ್ರ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸುವ ಪ್ರಕ್ರಿಯೆಗೆ ಚಾಲನೆ ದೊರೆತಿದೆ.
ಹಿಂದೆ ವಾಹನ ಸಂಚಾರಕ್ಕೆ ಪ್ರಮುಖ ಮಾರ್ಗವಾಗಿದ್ದ ಶಿಶಿಲ–ಬೈರಾಪುರ ರಸ್ತೆ ಸಂಪರ್ಕ ಕಡಿತಗೊಂಡಿರುವುದರಿಂದ ಈ ಭಾಗದ ಜನರು ಹಲವು ವರ್ಷಗಳಿಂದ ತೊಂದರೆ ಅನುಭವಿಸುತ್ತಿದ್ದಾರೆ. ಈ ರಸ್ತೆ ಪುನಃ ಸಂಪರ್ಕ ಕಲ್ಪಿಸಿದಲ್ಲಿ ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಗ್ರಾಮೀಣ ಭಾಗದ ಜನರಿಗೆ ಸಂಚಾರದ ಜೊತೆಗೆ ಶಿಕ್ಷಣ, ಆರೋಗ್ಯ, ಕೃಷಿ ಹಾಗೂ ವ್ಯಾಪಾರ ಚಟುವಟಿಕೆಗಳಿಗೆ ಹೆಚ್ಚಿನ ಅನುಕೂಲವಾಗಲಿದೆ.
ಇತ್ತೀಚೆಗೆ ನಡೆದ ಹಕ್ಕೊತ್ತಾಯ ಸಮಾವೇಶದಲ್ಲಿ ಭಾಗವಹಿಸಿದ್ದ ಶಾಸಕ ಹರೀಶ್ ಪೂಂಜ ಅವರು, ರಸ್ತೆ ಸಂಪರ್ಕದ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸುವ ಹಾಗೂ ರಸ್ತೆ ನಿರ್ಮಾಣದ ಸಾಧ್ಯತೆಗಳ ಕುರಿತು ಸಮಗ್ರ ಯೋಜನಾ ವರದಿ ಸಿದ್ಧಪಡಿಸುವ ಭರವಸೆ ನೀಡಿದ್ದರು. ಅದರಂತೆ ಪ್ರಸ್ತಾವಿತ ರಸ್ತೆ ಮಾರ್ಗದ ಸ್ಥಳ ಪರಿಶೀಲನೆಯನ್ನೂ ನಡೆಸಲಾಗಿತ್ತು.
ಇದರ ಮುಂದುವರಿದ ಭಾಗವಾಗಿ ಇಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ, ಶಾಸಕ ಹರೀಶ್ ಪೂಂಜ ಅವರ ಉಪಸ್ಥಿತಿಯಲ್ಲಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ಸಭೆ ನಡೆಯಿತು.
ಸಭೆಯಲ್ಲಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಕಾರ್ಯಪಾಲಕ ಅಭಿಯಂತರರು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಭಾಗವಹಿಸಿ, ಪ್ರಸ್ತಾವಿತ ರಸ್ತೆ ಮಾರ್ಗದ ತಾಂತ್ರಿಕ ಸಾಧ್ಯತೆಗಳು, ಅರಣ್ಯ ಪ್ರದೇಶಕ್ಕೆ ಸಂಬಂಧಿಸಿದ ನಿಯಮಗಳು, ಅಗತ್ಯ ಅನುಮತಿಗಳು, ಭೂಮಿಯ ಸ್ವರೂಪ ಹಾಗೂ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದ ವಿವಿಧ ತಾಂತ್ರಿಕ ಅಂಶಗಳ ಕುರಿತು ಸಮಗ್ರ ಚರ್ಚೆ ನಡೆಸಿದರು.
ಅಲ್ಲದೆ, ಸಮಗ್ರ ಯೋಜನಾ ವರದಿ ಸಿದ್ಧಪಡಿಸಲು ಅಗತ್ಯವಿರುವ ಸ್ಥಳ ಪರಿಶೀಲನೆ, ದಾಖಲೆಗಳ ಸಂಗ್ರಹ, ಇಲಾಖಾವಾರು ಜವಾಬ್ದಾರಿಗಳು ಹಾಗೂ ವರದಿ ಪೂರ್ಣಗೊಳಿಸುವ ಕಾಲಮಿತಿಯ ಬಗ್ಗೆಯೂ ಚರ್ಚಿಸಲಾಯಿತು.
ಶಿಶಿಲ–ಬೈರಾಪುರ ರಸ್ತೆ ಸಂಪರ್ಕದ ದಶಕಗಳ ಬೇಡಿಕೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಡಿಪಿಆರ್ ಸಿದ್ಧಪಡಿಸುವ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಶಾಸಕ ಹರೀಶ್ ಪೂಂಜ ಅವರು ಒತ್ತಾಯಿಸಿದ್ದು, ನಿಗದಿತ ಕಾಲಮಿತಿಯೊಳಗೆ ವರದಿ ಪೂರ್ಣಗೊಳಿಸಲು ಸಂಬಂಧಪಟ್ಟ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಮುಂದಿನ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಸೂಚಿಸಲಾಯಿತು.
ಶಿಶಿಲ–ಬೈರಾಪುರ ರಸ್ತೆ ಸಂಪರ್ಕ ಪುನರಾರಂಭಗೊಂಡರೆ ಎರಡು ಜಿಲ್ಲೆಗಳ ಗಡಿ ಭಾಗದ ಗ್ರಾಮೀಣ ಜನರ ಬದುಕಿಗೆ ಹೊಸ ಸಂಪರ್ಕ ಸೇತುವೆ ನಿರ್ಮಾಣವಾಗಲಿದ್ದು, ಈ ನಿಟ್ಟಿನಲ್ಲಿ ನಡೆದಿರುವ ಸಭೆ ದಶಕಗಳ ಬೇಡಿಕೆ ಈಡೇರುವ ನಿರೀಕ್ಷೆಯನ್ನು ಹೆಚ್ಚಿಸಿದೆ.
